
26-3-2025
ಪ್ರಕಟಣೆಯ ಕೃಪೆಗಾಗಿ
ಪಕ್ಷದ ವರಿಷ್ಠರ ನಿರೀಕ್ಷೆಯ ಗುರಿ ತಲುಪಲು ಮನವಿ
ಈ ಬೆಳವಣಿಗೆ ದುರದೃಷ್ಟಕರ- ಬಿ.ವೈ.ವಿಜಯೇಂದ್ರ
ಬೆಂಗಳೂರು: ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ವಿಶ್ಲೇಷಿಸಿದ್ದಾರೆ.
ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ತಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ; ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ ಎಂದು ಬರೆದಿದ್ದಾರೆ.
ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ ಎಂದಿರುವ ಅವರು, ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ತಿಳಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login